ವಿದ್ಯಾರ್ಥಿ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರಾಗಿ ಯು.ಟಿ.ಖಾದರ್‌ ನೇಮಕ



ಬೆಂಗಳೂರು, ಆ.26: ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ಸುಧಾರಣೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಶಿಫಾರಸುಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ.


ಉಪಸಮಿತಿಯು ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಪ್ರಮುಖ ಸವಾಲುಗಳ ಕುರಿತು ಅಧ್ಯಯನ ನಡೆಸಲಿದೆ. ಪರೀಕ್ಷೆ ಹಾಗೂ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ತಡೆ, ಪಾರದರ್ಶಕತೆ ಹಾಗೂ ನಿಗದಿತ ಪರೀಕ್ಷಾ-ನೇಮಕಾತಿ ವೇಳಾಪಟ್ಟಿ ರೂಪಿಸುವ ಕುರಿತು ಶಿಫಾರಸು ಮಾಡಲಿದೆ.


ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ವಿದ್ಯಾರ್ಥಿಗಳು ಮತ್ತು ಕುಟುಂಬಗಳ ಮೇಲಿನ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಲಿದೆ.


ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ, ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದೆ.


ಇದರ ಜೊತೆಗೆ ಉದ್ಯೋಗಾವಕಾಶಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸುವುದು, ಕೌಶಲ್ಯಾಭಿವೃದ್ಧಿ, ಅಪ್ರೆಂಟಿಸ್‌ಶಿಪ್ ಮತ್ತು ಇಂಟರ್ನ್‌ಶಿಪ್‌ಗೆ ಉತ್ತೇಜನ, ಶಿಕ್ಷಣ ಸಂಸ್ಥೆಗಳು ಹಾಗೂ ಕೈಗಾರಿಕೆಗಳ ನಡುವಿನ ಸಹಭಾಗಿತ್ವ ಬಲಪಡಿಸುವ ವಿಚಾರಗಳನ್ನೂ ಸಮಿತಿ ಪರಿಶೀಲಿಸಲಿದೆ.


ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಗೆ ಸಮಾಲೋಚನೆ ಹಾಗೂ ಬೆಂಬಲ ವ್ಯವಸ್ಥೆ ಬಲಪಡಿಸುವುದು, ಪರೀಕ್ಷೆ ಮತ್ತು ಶೈಕ್ಷಣಿಕ ಒತ್ತಡ ನಿರ್ವಹಣೆ ಹಾಗೂ ಆತ್ಮಹತ್ಯೆ ತಡೆಗೆ ಅಗತ್ಯ ಕ್ರಮಗಳ ಬಗ್ಗೆಯೂ ಶಿಫಾರಸುಗಳನ್ನು ರೂಪಿಸಲಿದೆ.


ವಿದ್ಯಾರ್ಥಿವೇತನ ಮತ್ತು ಆರ್ಥಿಕ ನೆರವು ಹೆಚ್ಚಿಸುವುದು, ಹಾಸ್ಟೆಲ್‌ಗಳ ಸಾಮರ್ಥ್ಯ ವಿಸ್ತರಣೆ, ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ ಹಾಗೂ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮೊದಲ ತಲೆಮಾರಿನ ಕಲಿಕಾರ್ಥಿಗಳಿಗೆ ಸೂಕ್ತ ಬೆಂಬಲ ಒದಗಿಸುವ ಕುರಿತು ಸಮಿತಿ ಗಮನ ಹರಿಸಲಿದೆ.


ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ರಾಜ್ಯಾದ್ಯಂತ ಸಮಾಲೋಚನೆ ನಡೆಸಿ, ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಉಪಸಮಿತಿಗೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ವಿವಿಧ ಕ್ಷೇತ್ರಗಳ ತಜ್ಞರ ನೆರವು ಪಡೆಯಲು ಸಮಿತಿಗೆ ಅವಕಾಶ ನೀಡಲಾಗಿದೆ.


ಈ ಸಚಿವ ಸಂಪುಟ ಉಪಸಮಿತಿಗೆ ಉನ್ನತ ಶಿಕ್ಷಣ ಇಲಾಖೆಯನ್ನು ನೋಡಲ್ ಇಲಾಖೆಯಾಗಿ ನೇಮಿಸಲಾಗಿದೆ.

Next Post Previous Post
No Comment
Add Comment
comment url




sr7themes.eu.org